ಶಿವಮೊಗ್ಗ : ರಾಜ್ಯದ ಒಳನಾಡು ಹಾಗೂ ಗಡಿಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ೫೦ಲಕ್ಷ ರೂ ಆರ್ಥಿಕ ನೆರವನ್ನು ಒದಗಿಸಲು ಉದ್ದೇಶಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಬಿ.ಬಿ. ಸ್ಟ್ರೀಟ್‌ನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಕುಟುಂಬದವರ ಹೆಸರಿನಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ಸ್ಕೂಲ್‌ಬ್ಯಾಗ್, ನೋಟ್‌ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಬೇಕು. ಅದಕ್ಕಾಗಿ ಅಗತ್ಯವಿರುವ ಎಲ್ಲಾ ನೆರವು ಹಾಗೂ ಸಹಕಾರವನ್ನು ನೀಡುವುದಾಗಿ ಅವರು ತಿಳಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಎಸ್ಡಿಎಂಸಿ ಅಧ್ಯಕ್ಷ ಗಣೇಶ್, ಶಾಲೆಯ ಮುಖ್ಯೋಪಾಧ್ಯಾಯಿನಿ ಬೇಬಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.