ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ವಿವಾದ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶವನ್ನೇ ವ್ಯಾಪಿಸಿದೆ. ಸದ್ಯ ಹೈಕೋರ್ಟ್ ತೀರ್ಮಾನಕ್ಕಾಗಿ ಕಾದು ಕುಳಿತಿದ್ದಾರೆ. ಸಮವಸ್ತ್ರ ಸಂಘರ್ಷದ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭಗೊಂಡಿವೆ.
9, 10ನೇ ತರಗತಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ. ಶಾಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಡಿಸಿ, ಎಸ್ಪಿ ಭೇಟಿ ನೀಡಬೇಕು. ಶಾಲಾ ಆಡಳಿತ ಮಂಡಳಿಗಳ ಜತೆ ಸಂಪರ್ಕದಲ್ಲಿರಬೇಕು. ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಧಿಕಾರಿಗಳು ಮೇಲಿನ ಆದೇಶಗಳಿಗೆ ಕಾಯಬಾರದು. ಸಂದರ್ಭಕ್ಕೆ ತಕ್ಕಂತೆ ನೀವೇ ಕ್ರಮ ಕೈಗೊಳ್ಳಿ ಅಂತ ಜಿಲ್ಲಾಧಿಕಾರಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳ ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮನವಿ ಮಾಡಿದ್ದಾರೆ.