ಶಿವಮೊಗ್ಗ : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಬದಲಾವಣೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ನಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಪಟ್ಟು ಜೋರಾಗಿದೆ.
ಬೆಂಗಳೂರಿನ ಚಂದ್ರಶೇಖರ್ ಕೊಲೆ ಸಂಬಂಧ ಗೃಹ ಸಚಿವರು ನೀಡಿದ ಹೇಳಿಕೆಯನ್ನು ರಾಜ್ಯಾದ್ಯಂತ ಕಾಂಗ್ರೆಸ್ ಬಲವಾಗಿ ಖಂಡಿಸುತ್ತಿದೆ. ಶಿವಮೊಗ್ಗದಲ್ಲಿಯೂ ಆರಗ ಜ್ಞಾನೇಂದ್ರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯ್ತು. ಗೃಹ ಮಂತ್ರಿಗಳು ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ. ಅವರನ್ನು ಸಂಪುಟದಿಂದ ತಕ್ಷಣವೇ ವಜಾ ಮಾಡಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.