ಬೆಂಗಳೂರು : ಪಠ್ಯ ಪರಿಷ್ಕರಣೆಯಲ್ಲಿ ಮಹನೀಯರಿಗೆ ಅವಮಾನ ಹಿನ್ನೆಲೆ ಪರಿಷ್ಕೃತ ಪಠ್ಯಪುಸ್ತಕ ವಾಪಸ್ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಕೈ ಶಾಸಕರು ಭಾಗಿಯಾಗಿದ್ದರು. ಹಿಂದೆ ಇದ್ದ ಪಠ್ಯಪುಸ್ತಕವನ್ನೇ ವಿದ್ಯಾರ್ಥಿಗಳಿಗೆ ನೀಡುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನು ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ಕೈ ನಿರ್ಧಾರ ಮಾಡಿದೆ.
ಕುವೆಂಪು ಹುಟ್ಟೂರಿನಿಂದಲೇ ಬಿಜೆಪಿಗೆ ಟಾಂಗ್ ನೀಡಲು ಕಾಂಗ್ರೆಸ್ ಸಜ್ಜಾಗಿದ್ದು, ಕುವೆಂಪು ಅವರಿಗೆ ಅಗೌರವ ಹಿನ್ನೆಲೆ ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ಕಾಂಗ್ರೆಸ್ ಮುಂದಾಗಿದೆ. ಬಳಿಕ ಕುಪ್ಪಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಜೂ.೧೫ರಂದು ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.