ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ 

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದೆ. ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ನಲ್ಲಿ 96ಸಾವಿರಕ್ಕೂ ಅಧಿಕ ರೈತರು ಖಾತೆಯನ್ನು ಹೊಂದಿದ್ದಾರೆ. ಆದ್ರೆ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆ ಕೇವಲ 19 ಸಾವಿರ ಮಾತ್ರ. ಬೆಳೆ ಹಾನಿ ಸಂಭವಿಸಿದ ಸಂದರ್ಭದಲ್ಲಿ ವಿಮಾ ಹಣವನ್ನು ನೀಡುವ ಈ ಮಹತ್ವದ ಯೋಜನೆ ಬಗ್ಗೆ ರೈತರಿಗೆ ಮಾಹಿತಿಯನ್ನು ಒದಗಿಸಬೇಕು. ಯೋಜನೆಯ ಲಾಭವನ್ನು ಹೆಚ್ಚಿನ ರೈತರು ಪಡೆಯುವಂತೆ ಮನವೊಲಿಸಬೇಕು ಎಂದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಕುಮಾರ ಬಂಗಾರಪ್ಪ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪಿ.ರುದ್ರೇಗೌಡ, ಬೋಜೇಗೌಡ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.