ದೆಹಲಿ : ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗೂ ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ದಗಂಗೆಯ ಲಿಂಗೈಕ್ಯ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರಿಗೆ ಭಕ್ತಿಪೂರ್ವಕ ನಮನಗಳು. ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಅವರ ಬದುಕು ಮತ್ತು ಸಾಧನೆಗಳು ನಮಗೆ ಪ್ರೇರಣೆಯಾಗಿದೆ ಎಂದು ಬರೆದುಕೊಂಡಿದ್ದಾರೆ.