ರಾಜ್ಯಾದ್ಯಂತ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 

ಬೆಂಗಳೂರು : ರಾಜ್ಯಾದ್ಯಂತ ಎಸ್‌ಎಲ್‌ಎಸಿ ಪರೀಕ್ಷೆ ಪ್ರಾರಂಭವಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗಳು ಪರೀಕ್ಷೆ ನಡೆಯಲಿವೆ. ಕಳೆದ ಎರಡು ವರ್ಷ ಕೋವಿಡ್ ಭೀತಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಸದ್ಯ ಕೋವಿಡ್ 3ನೇ ಅಲೆಯ ತೀವ್ರತೆ ಕಡಿಮೆಯಾಗಿದ್ದು, ಈಗಾಗಲೇ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 4,52,732 ಗಂಡು ಮಕ್ಕಳು ಹಾಗೂ 4,21,110ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಸೇರಿದ್ದಾರೆ. ಅಲ್ಲದೇ ಸುಮಾರು 5,307 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಲಾಗಿದೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಕೆಎಸ್‌ಆರ್‌ಟಿಸಿ, ಬಿಎಂಟಿಸಿ  ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ. ಅಂತೆಯೇ ಈ ಬಾರಿಯೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.