ಡಾ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ 

ಬೆಂಗಳೂರು : ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದಂತೆ ಡಾ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಂಪುಟ ಸಭೆಯಲ್ಲಿ ಶುಕ್ರವಾರ ನಿರ್ಣಯ ಕೈಗೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕಸ್ತೂರಿ ರಂಗನ್ ವರದಿ ಹೇಳಿದಂತೆ ಪಶ್ಚಿಮಘಟ್ಟಗಳ ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರ ಮಾಡಲು ಅಸಾಧ್ಯ. ಹೀಗಾಗಿ, ಈ ವರದಿಯನ್ನು ನಾವು ಒಪ್ಪಲು ಸಾಧ್ಯವಿಲ್ಲ ಅಂತ ನಿರ್ಧರಿಸಲಾಗಿದೆ ಎಂದರು.

ಈಗಾಗಲೇ ಕೇಂದ್ರ ಸರ್ಕಾರದ ಮುಂದೆ ವರದಿ ವಿರೋಧಿಸಿ ಎರಡು ಸಲ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಇದೀಗ ಮತ್ತೆ ವರದಿ ಒಪ್ಪುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಲು ತೀರ್ಮಾನಿಸಲಾಗಿದೆ.

ವಿವರವಾದ ಕಾರಣಗಳನ್ನು ಮುಂದಿನ ದಿನಗಳಲ್ಲಿ ಕೇಂದ್ರಕ್ಕೆ ತಿಳಿಸಲಾಗುವುದು. ಸದ್ಯಕ್ಕೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇರುವ ಕಾರಣ ಕಸ್ತೂರಿ ರಂಗನ್ ವರದಿ ಸ್ವೀಕಾರ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.